ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ.

ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ಮಲ್ಲಿಕಾರ್ಜುನ ಬಂಗ್ಲೆ ನೇತೃತ್ವದಲ್ಲಿ ಇಂದು ಒತ್ತಾಯ

ಚಳಿಗಾಲದ ಅಧಿವೇಶನದಲ್ಲಿ ಪತ್ರಕರ್ತರ ಬಪರ ಧ್ವನಿ ಎತ್ತಲು ಶಾಸಕರಿಗೆ ಮನವಿ; ರಕ್ತದಲ್ಲಿ ಸಹಿ ಮಾಡಿದ ಮನವಿ ಪತ್ರ ಸಲ್ಲಿಕೆ

ಯಾದಗಿರಿ: ಪತ್ರಕರ್ತರ ಮೇಲಿನ ಹಲ್ಲೆ, ದೌರ್ಜನ್ಯ ಹಾಗೂ ಬೆದರಿಕೆ ಪ್ರಕರಣಗಳಿಗೆ ಕಡಿವಾಣ ಹಾಕಿ, ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ವೃತ್ತಿಪರ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ನೇತೃತ್ವದಲ್ಲಿ ನಿಯೋಗವು ಮಂಗಳವಾರ ಶಾಸಕರು ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ನಗರದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರನ್ನು ಭೇಟಿ ಮಾಡಿದ ನಿಯೋಗ, ಡಿಸೆಂಬರ್ 2ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಸದನದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವಂತೆ ಶಾಸಕರಿಗೆ ಮನವಿ ಮಾಡಿತು.

ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆದರೆ, ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪತ್ರಕರ್ತರು ಹಲ್ಲೆ, ಬೆದರಿಕೆ ಮತ್ತು ವಿವಿಧ ರೀತಿಯ ದೌರ್ಜನ್ಯಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಘಟನೆಗಳಿಗೆ ಶಾಶ್ವತ ಕಡಿವಾಣ ಹಾಕಲು ಪ್ರತ್ಯೇಕ ರಕ್ಷಣಾ ಕಾಯ್ದೆಯ ಅಗತ್ಯವಿದೆ ಎಂದು ನಿಯೋಗ ಪ್ರತಿಪಾದಿಸಿತು.

ಕಾಯ್ದೆ ಜಾರಿಗೆ ಆಗ್ರಹಿಸಿ ಸಂಘಟನೆಯ ವತಿಯಿಂದ ರಕ್ತದಲ್ಲಿ ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸುವಂತೆ ಕೋರಲಾಯಿತು. ಅಲ್ಲದೆ, ಪತ್ರಕರ್ತರ ಹಿತದೃಷ್ಟಿಯಿಂದ ಸರ್ಕಾರಕ್ಕೆ ಸೂಕ್ತ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಪತ್ರಕರ್ತರು ಯಾವುದೇ ಒತ್ತಡ, ಭಯವಿಲ್ಲದೆ ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣವಾಗಬೇಕು. ಪತ್ರಿಕಾ ಸ್ವಾತಂತ್ರ್ಯ ಕೇವಲ ಘೋಷಣೆಯಾಗದೆ, ಅದಕ್ಕೆ ಕಾನೂನಿನ ರಕ್ಷಣೆ ದೊರೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಂಘಟನೆಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಮಲ್ಲಿಕಾರ್ಜುನ ಬಂಗ್ಲೆ ನೇತೃತ್ವದ ನಿಯೋಗ ಒತ್ತಾಯಿಸಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ, ಜಿಲ್ಲಾ ಹಾಗೂ ಗುರುಮಠಕಲ್ ಮತ್ತು ಸುರಪುರ ತಾಲೂಕು ಘಟಕಗಳ ಪದಾಧಿಕಾರಿಗಳು ನಿಯೋಗದಲ್ಲಿದ್ದರು. ಇದೇ ಸಂದರ್ಭದಲ್ಲಿ ದಣಿವರಿಯದ ಪತ್ರಕರ್ತರ ನಾಯಕ ಕಾನಿಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ರವರನ್ನು ನೆನಪಿನ ಕಾಣಿಕೆ ಶಾಲು ಹಾಗೂ ಹಾರದೊಂದಿಗೆ ಹೃದಯ ಪೂರ್ವಕವಾಗಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಇಂದುಧರ ಸಿನ್ನೂರು ಪದಾಧಿಕಾರಿಗಳು ಹಾಗೂ ವಿವಿಧ ತಾಲೂಕಿನ ಪದಾಧಿಕಾರಿಗಳು ಸನ್ಮಾನಿಸಿದರು.


ಶಾಸಕ ಶರಣಗೌಡ ಕಂದಕೂರು ಸಕಾರಾತ್ಮಕ ಸ್ಪಂದನೆ.

ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಸಲ್ಲಿಸಿದ ಮನವಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಉತ್ತಮವಾಗಿ ಸ್ಪಂದಿಸಿದರು. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪತ್ರಕರ್ತರ ರಕ್ಷಣಾ ಕಾಯ್ದೆಯ ಕುರಿತು ಚರ್ಚಿಸಲು ಶೂನ್ಯ ವೇಳೆಯಲ್ಲಿ ಅವಕಾಶ ಕೋರಿ, ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು. ಪತ್ರಕರ್ತರ ಸುರಕ್ಷತೆ ಹಾಗೂ ಹಿತರಕ್ಷಣೆಯ ವಿಷಯವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.