ದುಗಹಟ್ಟಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ಯಳಂದೂರು : ದುಗಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅವಲ್ ಕಂದಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ಹಲವು ದಿನಗಳಿಂದ ನೀರು ಪೋಲಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಮುಖ್ಯ ಪೈಪ್ ಲೈನ್ ಒಡೆದು ರಸ್ತೆಯುದ್ದಕ್ಕೂ ನೀರು ಹರಿದು ವ್ಯರ್ಥವಾಗುತ್ತಿದೆ. ಒಂದು ಕಡೆ ಕುಡಿಯುವ ನೀರಿಗೆ ಪರದಾಡುತ್ತಿದ್ದರೆ, ಮತ್ತೊಂದು ಕಡೆ ಸಾವಿರಾರು ಲೀಟರ್ ನೀರು ಪೋಲಾಗುತ್ತಿದೆ. ಹಲವು ಬಾರಿ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಕೂಡಲೇ ಪೈಪ್ ದುರಸ್ತಿ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವರದಿ : ನಂಜುಂಡ ಸ್ವಾಮಿ, ಯಳಂದೂರು